ದೇವರ ನೀತಿಸಾಧನೆಗಳನ್ನು ಹೊಗಳುವುದು
೯೨
ಕೀರ್ತನೆ; ಸಬ್ಬತ್ ದಿನದ ಗೀತೆ.
 
೧ ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
೨ ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
೩ ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,
ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
೪ ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;
ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
೫ ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ;
ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
೬ ಪಶುಪ್ರಾಯನು ಅರಿಯನು;
ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
೭ ದುಷ್ಟರು ಹುಲ್ಲಿನಂತೆ ಬೆಳೆಯುವುದೂ,
ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
೮ ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
೯ ಯೆಹೋವನೇ, ಇಗೋ ನಿನ್ನ ಶತ್ರುಗಳು!
ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
೧೦ ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ;
ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
೧೧ ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;
ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
೧೨ ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು;
ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
೧೩ ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು,
ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
೧೪ ಮುಪ್ಪಿನಲ್ಲಿಯೂ ಫಲಿಸುವರು;
ಪುಷ್ಟಿಯಾಗಿದ್ದು ಶೋಭಿಸುವರು.
೧೫ ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.
ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.