19
ರಚನೆಗಾರ: ದಾವೀದ.
1 ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು.
ಗಗನವು ಆತನ ಕೈಕೆಲಸವನ್ನು ತಿಳಿಸುವುದು.
2 ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು.
ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
3 ಅವುಗಳ ಮಾತಾಗಲಿ
ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು.
4 ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ;
ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ.
ಆಕಾಶವು ಸೂರ್ಯನಿಗೆ ಮನೆಯಂತಿದೆ.
5 ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು.
ಕ್ರೀಡಾಪಟುವಿನಂತೆ
ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
6 ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ
ಮತ್ತೊಂದು ಕೊನೆಗೆ ಓಡುತ್ತಾಹೋಗುವನು.
ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.
7 ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ.
ಅವು ದೇವಜನರಿಗೆ ಬಲವನ್ನು ಕೊಡುತ್ತವೆ.
ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ.
ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
8 ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ.
ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ.
ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ.
ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.
9 ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ;
ಅದು ಶಾಶ್ವತವಾದದ್ದು.
ಯೆಹೋವನ ವಿಧಿಗಳು ಯಥಾರ್ಥವಾಗಿವೆ;
ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.
10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮ್ಯೂಲ್ಯವಾಗಿವೆ;
ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.
11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ;
ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.
12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ.
ಆ ಪಾಪಗಳು ನನ್ನನ್ನು ಆಳದಿರಲಿ.
ನೀನು ಸಹಾಯಮಾಡಿದರೆ
ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ.
ಯೆಹೋವನೇ, ನೀವೇ ನನ್ನ ಬಂಡೆಯಾಗಿರುವೆ.* ಬಂಡೆ ಕೆಲವು ಸಲ, ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳಲು ಜನರು ಆಶ್ರಯಿಸುವ ವಿಶಾಲವಾದ ಬಂಡೆ ಎಂಬರ್ಥವನ್ನು ಇದು ಕೊಡುತ್ತದೆ. ಇನ್ನೂ ಕೆಲವು ಸಲ, ತಮ್ಮ ವೈರಿಗಳಿಂದ ತಪ್ಪಿಸಿಕೊಂಡು ಸಂರಕ್ಷಣೆಗಾಗಿ ಜನರು ಓಡಿಹೋಗುವ ಕೋಟೆ ಎಂಬರ್ಥವನ್ನು ಇದು ಕೊಡುತ್ತದೆ. ನನ್ನನ್ನು ರಕ್ಷಿಸುವಾತನು ನೀನೇ.
*19:14: ಬಂಡೆ ಕೆಲವು ಸಲ, ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳಲು ಜನರು ಆಶ್ರಯಿಸುವ ವಿಶಾಲವಾದ ಬಂಡೆ ಎಂಬರ್ಥವನ್ನು ಇದು ಕೊಡುತ್ತದೆ. ಇನ್ನೂ ಕೆಲವು ಸಲ, ತಮ್ಮ ವೈರಿಗಳಿಂದ ತಪ್ಪಿಸಿಕೊಂಡು ಸಂರಕ್ಷಣೆಗಾಗಿ ಜನರು ಓಡಿಹೋಗುವ ಕೋಟೆ ಎಂಬರ್ಥವನ್ನು ಇದು ಕೊಡುತ್ತದೆ.