20
ರಚನೆಗಾರ: ದಾವೀದ.
1 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ.
ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ.
ಚೀಯೋನಿನಿಂದ ನಿನಗೆ ಆಧಾರ ನೀಡಲಿ.
3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ.
ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ.
ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು.
ಆತನ ಹೆಸರನ್ನು ಕೊಂಡಾಡೋಣ.
ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು.
ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು;
ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
7 ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು.
ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು.
ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು;
ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
9 ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು!
ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.