ರಕ್ಷಕನನ್ನು ಕೀರ್ತಿಸುವ ಭಕ್ತ
೩೩
೧ ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ;
ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
೨ ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ;
ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
೩ ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ;
ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
೪ ಯೆಹೋವನ ವಚನವು ಯಥಾರ್ಥವಾದದ್ದು;
ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
೫ ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು;
ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
೬ ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು;
ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
೭ ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ;
ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
೮ ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ;
ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
೯ ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು;
ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
೧೦ ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ;
ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
೧೧ ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು;
ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
೧೨ ಯಾರಿಗೆ ಯೆಹೋವನೇ ದೇವರಾಗಿದ್ದಾನೋ,
ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
೧೩ ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
೧೪ ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
೧೫ ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ,
ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
೧೬ ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ;
ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
೧೭ ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ;
ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
೧೮ ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ;
ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
೧೯ ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು;
ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
೨೦ ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ;
ನಮ್ಮ ಸಹಾಯವೂ, ಗುರಾಣಿಯೂ ಆತನೇ.
೨೧ ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು;
ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
೨೨ ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ;
ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.